ಶಹಾಪುರ,,
ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಅದನ್ನು ಪರಿಗಣಿಸಿ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬಾಗಲಕೋಟೆ, ವಿಜಯಪುರ ಹಾಗೂ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಿ ಆದೇಶಿಸಿದೆ. ಏಪ್ರಿಲ್, ಮೇ ತಿಂಗಳಲ್ಲಿ ಕಚೇರಿ ಸಮಯವನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30ಗಂ. ನಿಗದಿ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕೇವಲ 2 ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾಗಲಿದೆ.ಬೆಳಗಾವಿ ವಿಭಾಗದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಇನ್ನು ಕಲಬುರಗಿ ವಿಭಾಗಕ್ಕೆ ಒಳಪಡುವ ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1:30ರ ತನಕ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ. ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಪರಿಗಣಿಸಿ, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ.ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.