ಹೇಮರೆಡ್ಡಿ ಮಲ್ಲಮ್ಮ ಸಹಕಾರ ಬ್ಯಾಂಕ್ : ಠೇವಣಿದಾರರ ಹಣ ವಾಪಸ್ ನೀಡಲು ಆಗ್ರಹ

ಶಹಾಪುರ,

ಹೇಮರೆಡ್ಡಿ ಮಲ್ಲಮ್ಮ ಸಹಕಾರ ಬ್ಯಾಂಕಿನಲ್ಲಿ ನಡೆದಿರುವ ಎನ್ನಲಾದ ಆರ್ಥಿಕ ಅಕ್ರಮಗಳ ವಿರುದ್ಧ ಠೇವಣಿದಾರರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದು, ಅವರಿಗೆ ಕರ್ನಾಟಕ ಪ್ರಾಂತ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ, ಬ್ಯಾಂಕಿನಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಠೇವಣಿದಾರರ ಹಣವನ್ನು ಶೀಘ್ರವಾಗಿ ವಾಪಸ್ ನೀಡಬೇಕು ಎಂದು ಒತ್ತಾಯಿಸಿದರು.

ಬ್ಯಾಂಕಿನ ಅಧ್ಯಕ್ಷರು ತಾವು ಯಾವುದೇ ಹಣ ದುರುಪಯೋಗ ಮಾಡಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಮುಂದೆ ಬಂದು ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು. ಬ್ಯಾಂಕಿನಲ್ಲಿ ಠೇವಣಿ ಇಟ್ಟಿರುವ ಬಡ ಜನರ ಹಣವನ್ನು ಸುರಕ್ಷಿತವಾಗಿ ಹಿಂದಿರುಗಿಸುವ ಜವಾಬ್ದಾರಿ ಆಡಳಿತ ಮಂಡಳಿಯ ಮೇಲಿದೆ ಎಂದರು.

ಬ್ಯಾಂಕಿನ ಹೆಸರಿನೊಂದಿಗೆ ಭಕ್ತಿಭಾವ ಮತ್ತು ನಂಬಿಕೆ ಹೊಂದಿರುವ ಜನರು ಹಣ ಠೇವಣಿ ಇಟ್ಟಿದ್ದು, ಈ ಘಟನೆ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಅಕ್ರಮ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ತಪ್ಪಿತಸ್ಥರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಠೇವಣಿದಾರರಿಗೆ ಹಣ ನೀಡದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿ, ಅಗತ್ಯವಿದ್ದರೆ ಶಹಾಪುರ ಬಂದ್ಗೂ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಮಾತನಾಡಿದ ಭೀಮರಾಯ ಪೂಜಾರಿ, ಠೇವಣಿದಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಬ್ಯಾಂಕಿನ ಆಡಳಿತ ಮಂಡಳಿಯವರು ಠೇವಣಿದಾರರ ವಿಶ್ವಾಸಕ್ಕೆ ಧಕ್ಕೆ ತಂದಿದ್ದು, ಹಣ ವಾಪಸ್ ನೀಡುವವರೆಗೆ ನಿರಂತರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.ಪ್ರತಿಭಟನೆಯಲ್ಲಿ ಅನೇಕ ಠೇವಣಿದಾರರು, ರೈತ ಸಂಘದ ಮುಖಂಡರು ಭಾಗವಹಿಸಿದ್ದರು.

 

Leave a Reply

Your email address will not be published. Required fields are marked *