ಶಹಾಪುರ:
ಮಾಜಿ ಸಚಿವ ಹಾಗೂ ಶಾಸಕ ಶರಣಬಸನಗೌಡ ದರ್ಶನಾಪುರ ಅವರು ಸಗರ ಮತ್ತು ರಸ್ತಾಪುರ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಸಗರ ಗ್ರಾಮದ ಎಕ್ಕಿಗೆಡ್ಡಿ ಪ್ರದೇಶದಲ್ಲಿ ಸುಮಾರು ₹7.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮುರಾರ್ಜಿ ದೇಸಾಯಿ ವಿದ್ಯಾರ್ಥಿ ನಿಲಯದ ಕಾಮಗಾರಿಯನ್ನು ವೀಕ್ಷಿಸಿದ ಅವರು, ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳೊಂದಿಗೆ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಅಚ್ಚುಕಟ್ಟಾಗಿ ಕಟ್ಟಡ ನಿರ್ಮಾಣವಾಗಬೇಕು ಎಂದು ತಿಳಿಸಿದರು.

ಬಳಿಕ ರಸ್ತಾಪುರ ಗ್ರಾಮಕ್ಕೆ ಭೇಟಿ ನೀಡಿದ ದರ್ಶನಾಪುರ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಕುಡಿಯುವ ನೀರು, ರಸ್ತೆ ಹಾಗೂ ಇತರೆ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವುಮಾಂತಪ್ಪ ಸಾಹು, ಕಾಂಗ್ರೆಸ್ ಮುಖಂಡ ಬಸುಗೌಡ ಬಿಳಾರ, ಶರಬಣ್ಣ ರಸ್ತಾಪುರ, ಶಾಂತುಪಾಟೀಲ ಕಾಡಂಗೇರಾ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.