ಶಹಾಪುರ:ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾದಗಿರಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಶಹಾಪುರ ತಾಲೂಕು ಕುರುಬ ಸಮಾಜದ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಶರಣಬಸಪ್ಪಗೌಡ ದರ್ಶನಾಪುರ ಅವರು ಹಲವು ದಶಕಗಳಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಅನುಭವಿ ರಾಜಕಾರಣಿಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಹಿಂದುಳಿದ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ನಾಯಕನಾಗಿ ಗುರುತಿಸಿಕೊಂಡಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಈ ಭಾಗದ ಅಭಿವೃದ್ಧಿಗಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ, ರೈತರ ಸಮಸ್ಯೆಗಳ ಪರಿಹಾರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆ ಸೇರಿದಂತೆ ಮೂಲಭೂತ ಸೌಕರ್ಯಗಳ ವೃದ್ಧಿಗೆ ಅವರು ವಿಶೇಷ ಒತ್ತು ನೀಡುತ್ತಿದ್ದು, ನಗರ ಪ್ರದೇಶಗಳಲ್ಲಿಯೂ ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಗೆ ಕಾಳಜಿ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಜಕೀಯ ಜೀವನದಲ್ಲಿ ಕಳಂಕರಹಿತ ವ್ಯಕ್ತಿತ್ವ ಹೊಂದಿರುವ ಶರಣಬಸಪ್ಪಗೌಡ ದರ್ಶನಾಪುರ ಅವರು ಪಕ್ಷದ ಸಂಘಟನೆ ಬಲವರ್ಧನೆಗೂ ಮಹತ್ವದ ಕೊಡುಗೆ ನೀಡಿದ್ದಾರೆ. ಆದ್ದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಶರಣಬಸಪ್ಪಗೌಡ ದರ್ಶನಾಪುರ,ಅವರಿಗೆ ಸಚಿವ ಸ್ಥಾನ ನೀಡಿದರೆ ಯಾದಗಿರಿ ಜಿಲ್ಲೆ ಸೇರಿದಂತೆ ಸಂಪೂರ್ಣ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ಸಿಗಲಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಅವರು ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಈ ಭಾಗದ ಜನರ ಆಶಯವನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುರುಬ ಸಮುದಾಯದ ಮುಖಂಡರಾದ ಶಾಂತು ಪಾಟೀಲ್, ಶಾಂತಗೌಡ ನಾಗನಟಗಿ, ಭೀಮನಗೌಡ ದರಿಯಾಪುರ,ರವಿ ರಾಜಾಪುರ, ಭೀಮಾಶಂಕರ ಹುಲ್ಕಲ್, ರಾಯಪ್ಪ ಚಲುವಾದಿ, ಶರಬಣ್ಣ ರಸ್ತಾಪುರ, ಬಲಭೀಮ ಮಡ್ನಾಳ, ಭೀಮರಾವ ಇದ್ದರು.