ಶಹಾಪುರ: ಪೋಲಿಯೊ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಅವರ ಆರೋಗ್ಯವನ್ನು ಕಾಪಾಡಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯಲ್ಲಪ್ಪ ಪಾಟೀಲ್ ಹೇಳಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೋಲಿಯೊ ಅತ್ಯಂತ ಅಪಾಯಕಾರಿ ಕಾಯಿಲೆಯಾಗಿದ್ದು, ಲಸಿಕೆಯಿಂದ ಮಾತ್ರ ಅದನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದು ತಿಳಿಸಿದರು.
ಪೋಷಕರು ಯಾವುದೇ ನಿರ್ಲಕ್ಷ್ಯ ಮಾಡದೆ, ತಮ್ಮ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು. ಸರ್ಕಾರದ ಈ ಉಚಿತ ಲಸಿಕಾ ಕಾರ್ಯಕ್ರಮದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ತೆರಳಿ ಹಾಗೂ ಲಸಿಕಾ ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತನ್ನ ಇಬ್ಬರು ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪೋಲಿಯೋ ಲಸಿಕೆ ಹಾಕಿಸಿದರು. ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.