ಶಹಾಪುರ:
ಶಾಸಕರು ತಾಲ್ಲೂಕಿನ ಗೋಗಿ ಗ್ರಾಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಬಳಿಕ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.ನಗರದ ಹಾಲಭಾವಿ ರಸ್ತೆ ಫಿಲ್ಟರ್ ಬೆಡ್ ಕಾಲೋನಿಯಲ್ಲಿರುವ ಸ.ನಂ.581ರ ಆಶ್ರಯ ಸಮಿತಿ ಜಾಗದಲ್ಲಿ ಸುಮಾರು 3 ಎಕರೆ ಪ್ರದೇಶದಲ್ಲಿ ಅಂದಾಜು ₹3.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನಕ್ಕೆ ಸ್ಥಳ ವೀಕ್ಷಣೆ ನಡೆಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಬಳಿಕ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಕಟ್ಟಡ ಕಾಮಗಾರಿ ಹಾಗೂ ನಗರದ ವಿವಿಧ ಚರಂಡಿ ಕಾಮಗಾರಿಗಳನ್ನು ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವುಮಾಂತಪ್ಪ ಚಂದಾಪುರ,ಆಶ್ರಯ ಸಮಿತಿ ಅಧ್ಯಕ್ಷ ವಸಂತ್ ಸುರುಪುರ್ಕರ್, ನಗರಸಭೆಯ ಪೌರಾಯುಕ್ತರು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಶಹಾಪುರ ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಅಂಬೇಡ್ಕರ್ ಭವನ ಸೇರಿದಂತೆ ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.