ಶಹಾಪುರ,
ಪರಿಸರ ಹಾಗೂ ಮಾನವನ ಆರೋಗ್ಯಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವ ಸಂಕಲ್ಪ ಪ್ರತಿಯೊಬ್ಬರ ಮನೆಯಿಂದಲೇ ಆರಂಭವಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಸುಪ್ರಿಯಾ ನವಲಿ ಕರೆ ನೀಡಿದರು.
ನಗರದ ಆದರ್ಶ ವಿದ್ಯಾಲಯದಲ್ಲಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ಲಾಸ್ಟಿಕ್ ನಿಷೇಧ ಮತ್ತು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಅಂಗಡಿ-ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಮಾರಾಟವನ್ನು ನಿಲ್ಲಿಸಬೇಕು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನಿರಂತರವಾಗಿ ಪರಿಶೀಲನೆ ನಡೆಸಬೇಕು. ಕಾನೂನು ಸೇವಾ ಸಮಿತಿಯ ಉದ್ದೇಶ ಕೇವಲ ಕಾನೂನು ಅರಿವು ಮೂಡಿಸುವುದಲ್ಲ, ಆರೋಗ್ಯ ಮತ್ತು ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದೂ ಆಗಿದೆ ಎಂದು ಹೇಳಿದರು.
ತಹಶೀಲ್ದಾರ ಸಿದ್ದಾರೂಢ ಬನ್ನಿಕೊಪ್ಪ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಕಳೆದ 20 ದಿನಗಳಿಂದ ನಡೆಯುತ್ತಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಮತದಾನದ ಹಕ್ಕು ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮತದಾರರ ಪಟ್ಟಿಯಲ್ಲಿರುವ ಲೋಪ-ದೋಷಗಳನ್ನು ಸರಿಪಡಿಸಿ ಅರ್ಹ ಮತದಾರರನ್ನು ಪಟ್ಟಿಯಲ್ಲಿ ಉಳಿಸುವ ಕಾರ್ಯ ನಡೆಯುತ್ತಿದ್ದು, ತಾಲೂಕಿನಲ್ಲಿ ಸಾರ್ವಜನಿಕರಿಂದ ಉತ್ತಮ ಸಹಕಾರ ದೊರೆಯುತ್ತಿದೆ ಎಂದು ತಿಳಿಸಿದರು.
ಬಿಇಒ ಶಿವಕುಮಾರ ಪಾರಶೆಟ್ಟಿ, ಎಪಿಪಿ ಮರೆಯಪ್ಪ ಹೊಸ್ಮನಿ, ವಕೀಲರ ಸಂಘದ ಕಾರ್ಯದರ್ಶಿ ಸಂತೋಷ ಸತ್ಯಂಪೇಟೆ, ಆದರ್ಶ ವಿದ್ಯಾಲಯದ ಪ್ರಾಚಾರ್ಯ ಹನುಮಂತರಾಯ ಸೋಮಾಪುರ ಉಪಸ್ಥಿತರಿದ್ದರು. ವಕೀಲೆ ಬಸಮ್ಮ ರಾಂಪುರೆ ಕಾನೂನು ಅರಿವು ಕುರಿತು ವಿಶೇಷ ಉಪನ್ಯಾಸ ನೀಡಿದರು.