ಶಹಾಪುರ,
ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಶಹಾಪುರ ಪೊಲೀಸ್ ಠಾಣೆ ವತಿಯಿಂದ ಭಾನುವಾರ ಬೆಳಗಿನ ಜಾವ ಶಹಾಪುರ ನಗರದಲ್ಲಿ ಜಾಗೃತಿ ಜಾಥಾ ಆಯೋಜಿಸಲಾಯಿತು.
ಶಹಾಪುರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಎಸ್. ಎಂ. ಪಾಟೀಲ ಅವರ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾ ವೇಳೆ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನವನ್ನು ನಡೆಸುವಂತೆ ಯುವ ಸಮುದಾಯಕ್ಕೆ ಕರೆ ನೀಡಲಾಯಿತು. ಇಂತಹ ಜಾಗೃತಿ ಕಾರ್ಯಕ್ರಮಗಳು ಸಮಾಜದಲ್ಲಿ ಮಾದಕ ವಸ್ತುಗಳ ವಿರುದ್ಧ ಜನರಲ್ಲಿ ಎಚ್ಚರಿಕೆ ಮತ್ತು ಹೊಣೆಗಾರಿಕೆಯ ಮನೋಭಾವ ಬೆಳೆಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು, ಮಾದಕ ವಸ್ತುಗಳ ಸೇವನೆಯು ಯುವಜನರ ಭವಿಷ್ಯವನ್ನು ಹಾಳು ಮಾಡುವುದರ ಜೊತೆಗೆ ಕುಟುಂಬ ಹಾಗೂ ಸಮಾಜದ ಮೇಲೆಯೂ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದರು. ಮಾದಕ ವಸ್ತುಗಳ ಬಳಕೆ, ಮಾರಾಟ ಹಾಗೂ ಅಕ್ರಮ ಸಾಗಾಣಿಕೆ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.