ಶಹಾಪುರ : ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮತ್ತು ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬುಧವಾರ ನಗರದ ಮುಖ್ಯರಸ್ತೆಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ನಗರದ ಎಕ್ಸಲೆಂಟ್ ನರ್ಸಿಂಗ್ ಕಾಲೇಜಿನ ಸಹಯೋಗದೊಂದಿಗೆ ನಡೆದ ಜಾಥಾದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಬ್ಯಾನರ್‌ಗಳು ಮತ್ತು ಕೈಬರಹದ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಪ್ಯಾನಲ್ ವಕೀಲ ಶರಣಪ್ಪ ಹೊಸ್ಮನಿ ಮಾತನಾಡಿ, ಪ್ಲಾಸ್ಟಿಕ್ ನಿಷೇಧಕ್ಕೆ ಸಂಬಂಧಿಸಿದ ಕಾನೂನು ಅರಿವು ಹಾಗೂ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ರಮೇಶ ಗುತ್ತೇದಾರ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಆರೋಗ್ಯ ಹಾಗೂ ಪರಿಸರದ ದುಷ್ಪರಿಣಾಮಗಳನ್ನು ವಿವರಿಸಿ, ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.ಜಾಥಾವು ಸಂಗೊಳ್ಳಿ ರಾಯಣ್ಣ ಭವನದಿಂದ ಆರಂಭಗೊಂಡು ಶ್ರೀ ಚರಬಸವೇಶ್ವರ ಗದ್ದುಗೆ ಮುಖ್ಯ ದ್ವಾರದವರೆಗೆ ಸಾಗಿತು.
ವಕೀಲರ ಸಂಘದ ಕಾರ್ಯದರ್ಶಿ ಸಂತೋಷ ಸತ್ಯಂಪೇಟ, ಪ್ಯಾನಲ್ ವಕೀಲ ಚಂದ್ರಶೇಖರ, ಎಲುಬು-ಕೀಲು ತಜ್ಞ ಹಾಗೂ ಜನರಲ್ ಫಿಜಿಷಿಯನ್ ಡಾ. ಶರಣು ಹೊಸ್ಮನಿ, ಎಕ್ಸಲೆಂಟ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.