ಗೋಗಿ ಕೆ. ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ : 150 ಅರ್ಜಿ ಸ್ವೀಕೃತ : ಜನಸೇವೆಯೇ ನಮ್ಮ ಸಂಕಲ್ಪ : ಶಾಸಕ ದರ್ಶನಾಪುರ

ಶಹಾಪುರ: ಆಡಳಿತವನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಆಶಯದಡಿ ಶಹಾಪುರ ತಾಲೂಕಿನ ಗೋಗಿ ಕೆ. ಗ್ರಾಮದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶನಿವಾರ ಹೋಬಳಿ ಮಟ್ಟದ ಕಾರ್ಯಕ್ರಮ ನಡೆಯಿತು. ಇಂದು 150ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿವೆ.

ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೇವೆಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸರ್ಕಾರದ ಸೇವೆಗಳು ಹಾಗೂ ಯೋಜನೆಗಳು ಕಚೇರಿಗಳಿಗಷ್ಟೇ ಸೀಮಿತವಾಗದೆ ಜನರ ಮನೆಬಾಗಿಲಿಗೆ ತಲುಪಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ, ಶಿಕ್ಷಣ, ಪಿಂಚಣಿ, ಪಹಣಿ ತಿದ್ದುಪಡಿ, ವಸತಿ, ಪಡಿತರ ಚೀಟಿ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಿಗೆ ಅರ್ಜಿ ಸಲ್ಲಿಸಲು ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ರಸ್ತೆ, ಕುಡಿಯುವ ನೀರು, ಸಾರಿಗೆ, ಸರ್ಕಾರಿ ಶಾಲೆ, ಅಂಗನವಾಡಿ ಸೇರಿದಂತೆ ಸ್ಥಳೀಯ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.

 ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶಾಸಕ ದರ್ಶನಾಪುರ ಅವರಿಗೆ ಮನವಿ ಸಲ್ಲಿಸಿ, ಶಾಲೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಮರ್ಪಕವಾಗಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು ನಿಂತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಸ್ತೆ ಅಭಿವೃದ್ಧಿ ಹಾಗೂ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಸಿದ್ದಾರೂಡ ಬನ್ನಿಕೊಪ್ಪ, ತಾಲೂಕ ಆರೋಗ್ಯ ಅಧಿಕಾರಿ ಡಾ. ರಮೇಶ್ ಗುತ್ತೇದಾರ್, ಸಹಾಯಕ ಖಜಾನೆ ಅಧಿಕಾರಿ ಡಾ. ಮೋನಪ್ಪ ಶಿರವಾಳ, ಪಶು ಸಂಗೋಪ ನೀಲಕೀಯ ಸಹಾಯಕ ನಿರ್ದೇಶಕ ಡಾ ಅಣ್ಣಾರಾವ್ ಪಾಟೀಲ್, ಸಿಪಿಐ ದೀಪಕ್ ಬೂಸ್ ರೆಡ್ಡಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸುನಿಲ್ ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಶಿಕಾಂತ್ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ್ ಪಾರ ಶೆಟ್ಟಿ, ಸಿಡಿಪಿಓ ಅಶೋಕ್ ಜಿಟಿ, ತಾಲೂಕ ಬಿ ಸಿ ಎಂ ಅಧಿಕಾರಿ ಚನ್ನಪ್ಪ ಗೌಡ ಚೌದರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ತಲುಪಬೇಕು : ಶಾಸಕ ದರ್ಶನಾಪುರ

ಜನರು ತಮ್ಮ ಸಮಸ್ಯೆಗಳಿಗಾಗಿ ಕಚೇರಿಗಳಿಗೆ ಅಲೆದಾಡುವಂತಾಗಬಾರದು. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜಿಸಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆದ್ಯತೆಯಿಂದ ಆಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಒದಗಿಸಬೇಕು. ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಆಶಯದೊಂದಿಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿಯಾಗಿದೆ.

— ಶರಣಬಸಪ್ಪಗೌಡ ದರ್ಶನಾಪುರ, ಶಾಸಕರು ಶಹಾಪುರ. 

Leave a Reply

Your email address will not be published. Required fields are marked *