ಶಹಾಪುರ:
ಪ್ರಜಾಸೇವಾ ಆಂದೋಲನದ ಸಂದರ್ಭದಲ್ಲಿ ಗೋಗಿ ಹಾಗೂ ಶಹಾಪುರ ಭಾಗದ ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಶುಕ್ರವಾರ ತಹಸೀಲ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿಗತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಬಾಕಿ ಉಳಿದಿರುವ ಅರ್ಜಿಗಳನ್ನು ಶೀಘ್ರವಾಗಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸುವಂತೆ ಸೂಚಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಸಮಯದಲ್ಲಿ ಸ್ಪಂದಿಸದೆ ವಿಳಂಬ ಮಾಡುತ್ತಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಜನರ ಕೆಲಸಗಳನ್ನು ಅನಗತ್ಯವಾಗಿ ವಿಳಂಬ ಮಾಡದಂತೆ ಎಚ್ಚರಿಕೆ ನೀಡಿದರು. ಅರ್ಜಿಗಳ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಭೀಮರಾಯನಗುಡಿ ಪ್ರವಾಸಿ ಮಂದಿರದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಹಲವು ಗ್ರಾಮಸ್ಥರು ಶಾಸಕರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ವಿವರಿಸಿದರು. ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ತಹಸೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ, ಉಪತಹಸೀಲ್ದಾರ್ ಪ್ರಸನ್ನ ಮೋಗೆಕಾರ್, ಭೂಮಾಪನ ಇಲಾಖೆ ಉಪನಿರ್ದೇಶಕ ಮುಖಂದಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಸೇವಾ ಆಂದೋಲನದ ಸಂದರ್ಭದಲ್ಲಿ ಮಾತ್ರವಲ್ಲದೆ ಶಾಸಕರು ತಾಲೂಕು ಕಚೇರಿಗಳಿಗೆ ಇದೇ ರೀತಿ ನಿರಂತರವಾಗಿ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸುತ್ತಿದ್ದರೆ, ಸಾಮಾನ್ಯ ಜನರ ಕೆಲಸಗಳು ನಿಗದಿತ ಸಮಯದಲ್ಲಿ ನಡೆಯಲು ಅಧಿಕಾರಿಗಳಲ್ಲೂ ಜವಾಬ್ದಾರಿ ಮತ್ತು ಎಚ್ಚರಿಕೆ ಮೂಡುತ್ತದೆ. ಕಂದಾಯ ಇಲಾಖೆ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಇಲಾಖೆ, ವಸತಿ ನಿಲಯಗಳು, ಕಾಲೇಜು ಶಿಕ್ಷಣ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸುವುದರಿಂದ ಸಾರ್ವಜನಿಕರ ಸಮಸ್ಯೆಗಳು ಶೀಘ್ರವಾಗಿ ಪರಿಹಾರವಾಗಲು ಅನುಕೂಲವಾಗುತ್ತದೆ.
— ನಿಂಗಪ್ಪ ನಾಟೇಕರ್, ತಿಪ್ಪನಹಳ್ಳಿ