ಕೆಂಭಾವಿಯಲ್ಲಿ ಅಭಿವೃದ್ಧಿ ಕಾಮಗಾರಿ ವೀಕ್ಷಣೆ, ರೈತರ ಅಹವಾಲು ಆಲಿಸಿದ ಶಾಸಕ ದರ್ಶನಾಪುರ

ಕೆಂಭಾವಿ: ಶಹಾಪುರ ಮತಕ್ಷೇತ್ರದ ಕೆಂಭಾವಿ ಪಟ್ಟಣಕ್ಕೆ ಭೇಟಿ ನೀಡಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸುವುದರ ಜೊತೆಗೆ ರೈತರು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಕೆಕೆಆರ್‌ಡಿಬಿ ಯೋಜನೆಯಡಿ ಸುಮಾರು ₹6 ಕೋಟಿ ವೆಚ್ಚದಲ್ಲಿ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕೈಗೊಂಡಿರುವ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಶಾಸಕರು ಪರಿಶೀಲಿಸಿದರು. ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ರೈತರ ಮನವಿ ಪತ್ರ ಸ್ವೀಕರಿಸಿದರು. ಕಾಲುವೆ ಹಾಗೂ ಸಂಬಂಧಿತ ಕಾಮಗಾರಿಗಳಲ್ಲಿರುವ ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ನಂತರ ಕಾಂಗ್ರೆಸ್ ಪಕ್ಷದ ಕೆಂಭಾವಿ ಕಚೇರಿಗೆ ಆಗಮಿಸಿದ ಸಾರ್ವಜನಿಕರನ್ನು ಭೇಟಿ ಮಾಡಿದ ಶಾಸಕರು, ಅವರ ವಿವಿಧ ಅಹವಾಲುಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅಗತ್ಯ ಪರಿಹಾರ ಹಾಗೂ ನೆರವು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಗರನಾಡು ಜಿಲ್ಲಾ ರೈತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *