ಯಾದಗಿರಿ: ನಗರದ ಚಾಮ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಯಾದಗಿರಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಬನ್ನಪ್ಪ ಸುಂಕದ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಹಿರಿಯರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ರವೀಂದ್ರ ಅಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶ್ವನಾಥ ಸಿಂಗಾರ ಹಾಗೂ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಶಿವರಾಜ ಶರಣಪ್ಪ ಕಲಕೇರಿ ಆಯ್ಕೆಯಾದರು. ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಪ್ಪ ಎಸ್. ಬೆಟ್ಟಪ್ಪನವರ ಆಯ್ಕೆಯಾಗಿದ್ದು, ವಿವಿಧ ಹುದ್ದೆಗಳಿಗೆ ಇತರ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಬನ್ನಪ್ಪ ಸುಂಕದ, ಸಮಾಜವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಬಲಗೊಳಿಸಲು ಸಂಘಟನೆಯನ್ನು ಬಲಪಡಿಸಲಾಗುವುದು. ಯುವಕರನ್ನು ಸಂಘಟಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಯುವ ಘಟಕ ರಚಿಸಲಾಗಿದೆ ಎಂದು ತಿಳಿಸಿದರು.
ನೂತನ ಯುವ ಘಟಕದ ಅಧ್ಯಕ್ಷ ಶಿವರಾಜ ಕಲಕೇರಿ ಮಾತನಾಡಿ, ಹಿರಿಯರು ಹಾಗೂ ತಾಲೂಕು ಅಧ್ಯಕ್ಷರ ಮಾರ್ಗದರ್ಶನದಲ್ಲಿ ಸಮಾಜದ ಅಭಿವೃದ್ಧಿಗೆ ಶ್ರಮಿಸುವುದಾಗಿ ಮತ್ತು ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಹಾಪುರ, ಸುರಪುರ, ವಡಗೇರಾ, ಯಾದಗಿರಿ, ಗುರುಮಿಠಕಲ್ ಹಾಗೂ ಹುಣಸಗಿ ತಾಲೂಕುಗಳ ಸಮಾಜದ ಮುಖಂಡರು ಪಾಲ್ಗೊಂಡಿದ್ದರು. ನೂತನ ಪದಾಧಿಕಾರಿಗಳಿಗೆ ಸಮಾಜದ ಬಂಧುಗಳು ಮಾಲಾರ್ಪಣೆ ಮಾಡಿ, ಸಿಹಿ ಹಂಚಿ ಅಭಿನಂದಿಸಿದರು.