ಯಾದಗಿರಿ: ಶಹಾಪುರ ತಾಲೂಕಿನ ಬೇವಿನಹಳ್ಳಿ.ಜೆ ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘಟನೆ ಶಹಾಪುರ ಹಾಗೂ ಬೇವಿನಹಳ್ಳಿ.ಜೆ ಗ್ರಾಮದ ಸಮಸ್ತ ಗ್ರಾಮಸ್ಥರ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬೇವಿನಹಳ್ಳಿ.ಜೆ ಗ್ರಾಮವು ಈ ಹಿಂದೆ ದೋರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದ್ದು, ಕಳೆದ ಆರೇಳು ತಿಂಗಳ ಹಿಂದೆ ಕನ್ಯಕೊಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿ ಬದಲಾವಣೆಯಾದ ನಂತರ ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ತೀವ್ರಗೊಂಡಿವೆ. ಇದರಿಂದ ಗ್ರಾಮಸ್ಥರು ಅನೇಕ ರೀತಿಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ಕುರಿತು ಜುಲೈ 24 ಹಾಗೂ ಅಕ್ಟೋಬರ್ 1ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗ್ರಾಮದ ಕುಡಿಯುವ ನೀರಿನ ಬೋರ್ವೆಲ್ ಕೆಟ್ಟುಹೋಗಿದ್ದು, ಅದನ್ನು ದುರಸ್ತಿಗೊಳಿಸಿ ಸಮರ್ಪಕ ಕುಡಿಯುವ ನೀರು ಪೂರೈಸಲು ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಇದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಗ್ರಾಮದ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದ್ದು, ಕೊಳಚೆ ನೀರು ರಸ್ತೆಗಳ ಮೇಲೆ ಹರಿಯುತ್ತಿದೆ. ಇದರಿಂದ ದುರ್ವಾಸನೆ, ಸೊಳ್ಳೆಗಳ ಕಾಟ ಹಾಗೂ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಗ್ರಾಮದ ರಸ್ತೆಗಳ ಅಭಿವೃದ್ಧಿ ಕಾರ್ಯಗಳು ನಡೆಯದ ಕಾರಣ ಸಾರ್ವಜನಿಕರ ಸಂಚಾರಕ್ಕೂ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದರು.
ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕವಾಗಿ ಮನವಿ ಮಾಡಿದರೂ ಸಮರ್ಪಕವಾಗಿ ಸ್ಪಂದಿಸದೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಪತ್ರಿಕೆಗಳಲ್ಲಿಯೂ ಗ್ರಾಮದ ಸಮಸ್ಯೆಗಳ ಕುರಿತು ವಿಸ್ತೃತ ವರದಿ ಪ್ರಕಟವಾದರೂ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಲ್ಲದೆ, ಗ್ರಾಮದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಇದ್ದರೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕವಾಗಿ ಕೆಲಸ ನೀಡುತ್ತಿಲ್ಲ. ಕಳೆದ ಒಂದು ವರ್ಷದಿಂದ ಉದ್ಯೋಗವಿಲ್ಲದೆ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದು, ಅನೇಕ ಕೂಲಿ ಕಾರ್ಮಿಕರು ಜೀವನೋಪಾಯಕ್ಕಾಗಿ ದೊಡ್ಡ ನಗರಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನರೇಗಾ ಯೋಜನೆಯಡಿ ತಕ್ಷಣ ಉದ್ಯೋಗ ಒದಗಿಸಿ, ಗ್ರಾಮಸ್ಥರ ಗುಳೆ ತಪ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು: ಗ್ರಾಮದ ಕೆಟ್ಟುಹೋಗಿರುವ ಕುಡಿಯುವ ನೀರಿನ ಬೋರ್ವೆಲ್ ಅನ್ನು ತಕ್ಷಣ ದುರಸ್ತಿಗೊಳಿಸಿ ನಿರಂತರ ನೀರು ಪೂರೈಸಬೇಕು. ಗ್ರಾಮದ ಎಲ್ಲಾ ಚರಂಡಿಗಳಲ್ಲಿನ ಹೂಳು ತೆರವುಗೊಳಿಸಿ ಕೊಳಚೆ ನೀರು ರಸ್ತೆಗಳ ಮೇಲೆ ಹರಿಯದಂತೆ ಕ್ರಮ ಕೈಗೊಳ್ಳಬೇಕು. ರಸ್ತೆ ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಗ್ರಾಮದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಲು ವಿಶೇಷ ಕ್ರಮ ಜರುಗಿಸಬೇಕು.
ನರೇಗಾ ಯೋಜನೆಯಡಿ ಗ್ರಾಮಸ್ಥರಿಗೆ ತಕ್ಷಣ ಉದ್ಯೋಗ ಕಲ್ಪಿಸಬೇಕು. ನರೇಗಾ ಯೋಜನೆ ಹಾಗೂ ಇ-ಸ್ವತ್ತು ಆನ್ಲೈನ್ ವ್ಯವಸ್ಥೆಯನ್ನು ಶೀಘ್ರ ಕಾರ್ಯಗತಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿ ಬದಲಾವಣೆಯ ನಂತರ ಉಂಟಾಗಿರುವ ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿರುವ ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿ ಕರ್ತವ್ಯ ಲೋಪ ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು.
ಗ್ರಾಮಸ್ಥರ ನ್ಯಾಯಯುತ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ನಿರ್ದೇಶನ ನೀಡುವ ಮೂಲಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಅಧ್ಯಕ್ಷ ಪ್ರದೀಪ ಅಣಬಿ ಸೇರಿದಂತೆ ಬೇವಿನಹಳ್ಳಿ.ಜೆ ಗ್ರಾಮದ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.