ಪರಿಶಿಷ್ಟ ಜಾತಿ, ಪಂಗಡದವರ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ : ಜಿಲ್ಲಾಧಿಕಾರಿ ಸ್ನೇಹಲ್ ಆರ್

ಯಾದಗಿರಿ:ಪರಿಶಿಷ್ಟ ಜಾತಿ, ಪಂಗಡದವರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಆದ್ಯತೆ ನೀಡಿ, ಅವರ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತಿ ಸಮಿತಿ ಸಭೆಯಲ್ಲಿ ಸದಸ್ಯರ ಕೋರಿಕೆಗೆ ಸ್ಪಂದಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು ಎಂದು ಹೇಳಿದರಲ್ಲದೆ ಅಧಿಕಾರಿಗಳು ಫಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ದೌರ್ಜನ್ಯ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಎನ್ ಜಿ ಓ ಇತರ ಇಲಾಖೆಗಳ ಮೂಲಕ ಶೋಷಣೆ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಆಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮತ್ತು ಕಾರ್ಯಕ್ರಮಗಳನ್ನು ಸಮುದಾಯದ ಜನ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಗ್ರಾಮಗಳಲ್ಲಿ ಹಮ್ಮಿಕೊಂಡು ಎಲ್ಲರೂ ಸಹಬಾಳ್ವೆಯಿಂದ ಬದುಕುವಂತೆ ಜಾಗೃತಿ ಮೂಡಿಸಲು ತಿಳಿಸಿದರು. ಇದಕ್ಕಾಗಿ ಸಮಿತಿಯ ನಾಮನಿರ್ದೇಶಿತ ಸದಸ್ಯರ ಸಲಹೆ ಪಡೆಯಲು ತಿಳಿಸಿದರು.

ದೌರ್ಜನ್ಯ ಸಮಿತಿಯ ಸದಸ್ಯ ನಾಗಣ್ಣ ಬಡಿಗೇರ ಮಾತನಾಡಿ ಮಂಜೂರು ಮಾಡಿದ ಸಾಲ ನೀಡಲು ಬ್ಯಾಂಕುಗಳು ಹಿಂದೇಟು ಹಾಕುತ್ತಿವೆ ಹಾಗೂ ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದ ರೈತರು ತಮ್ಮ ಹೊಲಗಳಿಗೆ ತೆರಳಲು ಮಾರ್ಗವಿದ್ದರೂ ಸರಿಯಾದ ದಾರಿ ಇಲ್ಲದೆ ಜಮೀನು ಕಾರ್ಯಗಳನ್ನು ಸ್ಥಗಿತಗೊಳಿಸಿದ್ದಾರೆ ಆ ರೈತರಿಗೆ ಜಮೀನಿಗೆ ಹೋಗಲು ರಸ್ತೆಯ ಅನುಕೂಲ ಮಾಡಿಕೊಡಲು ಜಿಲ್ಲಾಧಿಕಾರಿಯವರಿಗೆ ಕೋರಿದರು.

ಸ್ಪಂದಿಸಿದ ಜಿಲ್ಲಾಧಿಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಸಾಲ ಸೌಲಭ್ಯ ಕೋರಿ ವಿವಿಧ ಬ್ಯಾಂಕ್ಗಳಿಗೆ ಹೋದ ಸಂದರ್ಭದಲ್ಲಿ ಸಕಾಲಕ್ಕೆ ಸಾಲ ಸೌಲಭ್ಯ ಕಲ್ಪಿಸಿ ಅರ್ಹ ಫಲಾನುಭವಿಗಳಿಗೆ ನೆರವಾಗಬೇಕೆಂದು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಕಿಲ್ಲನಕೇರಾ ಗ್ರಾಮದ ರೈತರಿಗೆ ಜಮೀನಿಗೆ ತೆರಳಲು ಅನುಕೂಲ ಮಾಡಿಕೊಡುವಂತೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಮಯದ ಗಡುವು ನೀಡಿದರು.

ಪರಿಶಿಷ್ಟ ಜಾತಿ/ವರ್ಗಗಳ ಮೇಲಿನ ದೌರ್ಜನ್ಯ ಅಧಿನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರ ಧನ ಮಂಜೂರು ಮಾಡಬೇಕು. ಪರಿಹಾರ ನೀಡುವಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ದೌರ್ಜನ್ಯ ಪ್ರಕರಣಗಳು ನಡೆದರು ತಪ್ಪಿತಸ್ಥರಿಗೆ ಬಂಧಿಸಿ, ಜನಾಂಗದವರ ಮೇಲೆ ನಡೆಯುವ ದೌರ್ಜನ್ಯವನ್ನು ನಿಯಂತ್ರಿಸಬೇಕೆಂದು ಸಭೆಗೆ ಸದಸ್ಯರು ಕೋರಿದರು. ಇದಕ್ಕೆ ಸ್ಪಂದಿಸಿದ ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ರಕ್ಷಣೆ ಮಾಡದೆ ತ್ವರಿತ ವಾಗಿ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಈ ಕುರಿತಂತೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಸಭೆಗೆ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ, ಪಂಚಾಯತ ಸಿಪಿಓ ಗುರುನಾಥ ಗೌಡಪ್ಪನ್ನೋರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸವ ಎಸ್, ಪರಿಶಿಷ್ಟ ಪಂಗಡದ ಅಧಿಕಾರಿ ಪ್ರಭುದೊರೆ ದೌರ್ಜನ್ಯ ಸಮಿತಿಯ ಸದಸ್ಯರಾದ ನಾಗಣ್ಣ ಬಡಿಗೇರ, ರಮಾದೇವಿ ಕಿಲ್ಲನಕೇರಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಕೆ.ನಾರಾಯಣ ನಾಯ್ಡು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About The Author