ತಾಲೂಕು ಮಟ್ಟದ ಮಕ್ಕಳ ಕ್ರೀಡಾಕೂಟ : ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು

ಶಹಪುರ : ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿ. ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವದರಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ. ಸೋಲು -ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಗುಣ ಅಳವಡಿಸಿಕೊಳ್ಳಬೇಕು ಎಂದು  ಸಚಿವ ಶರಣಬಸಪ್ಪಗೌಡ ದರ್ಶನಪುರ ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾದ 2023–24 ನೇ ಸಾಲಿನ ತಾಲೂಕ ಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಕ್ರೀಡಾಜ್ಯೋತಿ ಎತ್ತಿ ಹಿಡಿಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನಲ್ಲಿ ಕ್ರೀಡಾ ಪ್ರತಿಭೆಗಳಿಗೇನು ಕೊರತೆ ಇಲ್ಲ.ಇಲ್ಲಿನ ಮಕ್ಕಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದಾರೆ. ಮಕ್ಕಳಿಗೆ ಸ್ಪರ್ಧಾ ಮನೋಭಾವನೆ ಬೆಳೆಯಬೇಕಾದರೆ ಮೊದಲು ಶಿಕ್ಷಕರು ವಿವಿಧ ಸಹಪಠ್ಯಗಳಲ್ಲಿ ಭಾಗವಹಿಸಬೇಕು. ಇದರಿಂದ ಮಕ್ಕಳ ಮನಸ್ಸಿನಲ್ಲಿ ಪ್ರತಿಭೆಗಳು ಬೆಳೆಯಲು ಕಾರಣವಾಗುತ್ತದೆ. ಶಿಕ್ಷಕರ ಮತ್ತು ಪಾಲಕರ ಮಾತುಗಳನ್ನು ಮಕ್ಕಳು ತಪ್ಪದೇ ಪಾಲಿಸಬೇಕು.ಜೊತೆಗೆ ಗುರು ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು.

ತಾಪಂ. ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರೇದಾರ್ ಮಾತನಾಡಿ,ಮಕ್ಕಳು ದೇಶದ ನಿಜವಾದ ಸಂಪತ್ತು. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ, ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ಸೋಲು -ಗೆಲುವಿನ ತಲೆ ಕೆಡಿಸಿಕೊಳ್ಳದೆ ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.

ಪೌರಾಯುಕ್ತ ರಮೇಶ್ ಬಡಿಗೇರ್, ದೈಹಿಕ ಶಿಕ್ಷಣಾಧಿಕಾರಿ ಶರಣಪ್ಪ ಪಾಟೀಲ, ಅಕ್ಷರ ದಾಸೋಹ ಯೋಜನಾಧಿಕಾರಿ ಸೂರ್ಯವಂಶಿ, ಬಿ ಆರ್ ಸಿ ರೇಣುಕಾ ಪಾಟೀಲ್, ತಾಲೂಕ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಯಾಳಗಿ, ಆದರ್ಶ ವಿದ್ಯಾಲಯದ ಮುಖ್ಯಗುರುಗಳಾದ ಎಚ್ ಎಸ್ ಸೋಮಪುರ್, ತಾಲೂಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ವೈದ್ಯ, ಶಿವಲಿಂಗಪ್ಪ ಸೇರಿದಂತೆ ಶಿಕ್ಷಕರು ಕ್ರೀಡಾಪಟುಗಳು ಇದ್ದರು.

About The Author