ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ವಿಕಾಸದ ಹಿತದೃಷ್ಟಿಯಿಂದ ಕೂಸಿನ ಮನೆ ಅಗತ್ಯ: ಸಚಿವ ದರ್ಶನಾಪುರ

Yadagiri ಶಹಾಪುರ : ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ವಿಕಾಸದ ಹಿತದೃಷ್ಟಿಯಿಂದ ಕೂಸಿನ ಮನೆ ಅಗತ್ಯವಿದೆ. ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಕೂಲಿಕಾರರು ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ವಿಕಾಸದ ಹಿತದೃಷ್ಟಿಯಿಂದ ಕೂಸಿನ ಮನೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದ್ದು, ಇದರಿಂದ ಕಾರ್ಮಿಕರ ಮಕ್ಕಳಿಗೆ ತುಂಬಾ ಅನುಕೂಲವಾಗುತ್ತದೆ, ಜೊತೆಗೆ ಅರ್ಥಿಕವಾಗಿ ಕುಟುಂಬವು ಸದೃಡವಾಗಿ ಬೆಳೆಯಲು ಸಹಕಾರಿಯಾಗಲಿದೆ ಎಂದು ಸಣ್ಣ ಕೈಗಾರಿಕೆಗಳ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪೂರ ಹೇಳಿದರು.

ತಾಲೂಕಿನ ಹೋತಪೇಠ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದಿಗ್ಗಿ ಗ್ರಾಮದಲ್ಲಿ ಕೂಸಿನ ಮನೆ ಉದ್ಘಾಟಿಸಿ ಮಾತನಾಡಿದ ಅವರು,
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅತಿ ಹೆಚ್ಚು ಕೂಲಿಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ, ಅದರಲ್ಲಿ ಪ್ರಮುಖವಾಗಿ ಮಹಿಳಾ ಕೂಲಿ ಕಾರ್ಮಿಕ ಸಂಖ್ಯೆ ಹೆಚ್ಚಿದ್ದು, ಇವರು ಕೂಲಿ ಕೆಲಸದಲ್ಲಿ ತೊಡಗಿದ್ದರಿಂದ ಇವರಿಗೆ ತಮ್ಮ ಮಕ್ಕಳ ಲಾಲನೆ, ಪಾಲನೆ, ಹಾಗೂ ಆರೈಕೆ ಮಾಡಲಾಗುವುದಿಲ್ಲ. ಇದರಿಂದ ಮಕ್ಕಳ ಆರೋಗ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಹೆಚ್ಚು ಎಂದರು.

ತಾಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ, ಪೋಷಣೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ‘ಕೂಸಿನ ಮನೆ’ ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ರಾಜ್ಯ ಸರ್ಕಾರವು ಕೂಲಿ ಕಾರ್ಮಿಕರ ಮಕ್ಕಳ ಪೋಷಣೆ ಮಾಡುವ ಜವಾಬ್ದಾರಿ ಹೊತ್ತುಕೊಂಡಿದೆ ಎಂದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್ ಅವರು, ಕೂಸಿನ ಮನೆಯ ಮುಖ್ಯ ಉದ್ದೇಶ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ತೆರಳುತ್ತಾರೆ.ಕೂಲಿಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿ-ನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ. ಇಂತಹ ಕುಟುಂಬದ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ. ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಕೆಲಸದಿಂದ ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು ದೊರೆಯುವುದಿಲ್ಲ ಜೊತೆಗೆ ಪೌಷ್ಠಿಕ ಆಹಾರ ದೊರೆಯುವುದಿಲ್ಲ. ಇದರಿಂದಾಗಿ ಮಕ್ಕಳಲ್ಲಿ ಅಪೌಷ್ಟಿಕತೆ ಉಂಟಾಗುವ ಸಾಧ್ಯತೆ ಇದೆ. ಮಕ್ಕಳ ಉತ್ತಮ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಯೋಜನೆ ಆರಂಭಿಸಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಹೋತಪೆಟ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬ್ಲಮ್ಮ ದೊರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಿಎಸ್ ರಾಥೋಡ್, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಮೀನಾಕ್ಷಿ ಪಾಟೀಲ್, ತಾ.ಪಂ ಸಹಾಯಕ ನಿರ್ದೇಶಕ ಭೀಮರಾಯ ಬಿರೇದಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಡಿವಾಳಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.

About The Author